ಅರಣ್ಯ ಇಲಾಖೆಯ ಸಿಬ್ಬಂದಿ ಭಾಗಿಯಾಗಿರುವ ಶಂಕೆ: ವಿಲ್ಸನ್ ಫರ್ನಾಂಡೀಸ್
ಯಲ್ಲಾಪುರ: ತಾಲೂಕಿನ ಕಿರವತ್ತಿಯ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆಯದೇ ಬೇರೆ ಇಲಾಖೆಗಳ ಕಾಮಗಾರಿಗಳು ನಡೆಯುತ್ತಿವೆ. ಈ ಕಾರ್ಯದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೂ ಭಾಗಿಯಾಗಿರುವ ಶಂಕೆಯಿದೆ ಎಂದು ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ವಿಲ್ಸನ್ ಫರ್ನಾಂಡೀಸ್ ಆರೋಪಿಸಿದ್ದಾರೆ.
ಈ ಕುರಿತು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಪಂ ಹಾಗೂ ವಿವಿಧ ಇಲಾಖೆಯವರು ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಕಾಮಗಾರಿ ಕೈಗೊಳ್ಳುತ್ತಿದ್ದಾರೆ. ಅದಕ್ಕೆ ಅರಣ್ಯ ಇಲಾಖೆಯಿಂದ ಎನ್.ಒ.ಸಿ. ಪಡೆಯುತ್ತಿಲ್ಲ ಎಂದು ಅರಣ್ಯ ಇಲಾಖೆಯವರೇ ಲಿಖಿತವಾಗಿ ಮಾಹಿತಿ ನೀಡಿದ್ದಾರೆ. ಅನುಮತಿ ಪಡೆಯದೇ ಕಾಮಗಾರಿ ನಡೆಸಲಾಗುತ್ತಿರುವುದರ ಹಿಂದೆ ಅಧಿಕಾರಿಗಳ ನಡುವೆ ಹಣದ ವ್ಯವಹಾರ ನಡೆದಿರುವ ಬಗೆಗೆ ಅನುಮಾನ ಮೂಡುತ್ತಿದೆ ಎಂದರು.
ಕಿರವತ್ತಿಯ ಕೆ.ಪಿ.ಎಸ್.ಸಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ರಚನೆಯೇ ಅಸಮರ್ಪಕವಾಗಿದೆ. ಶಾಲೆಯ ಅಭಿವೃದ್ಧಿ ಕೆಲಸಗಳಲ್ಲಿ ಲಕ್ಷಾಂತರ ರೂ. ಅವ್ಯವಹಾರವಾಗಿದೆ. ಈ ಕುರಿತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿದ್ದು, ಸೂಕ್ತ ತನಿಖೆ ನಡೆಸಿ ಅವ್ಯವಹಾರ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ಸಂಘಟನೆಯ ಪದಾಧಿಕಾರಿಗಳಾದ ಜೆ.ಎಫ್. ಕಂಬಳೆನವರ್,ರಶೀದ್ ಖಾನ್,ಸುಭಾಸ್ ಹರಿಜನ, ಜಾಫರ್ ಒಂಟಿ,ಮಹೇಶ ನಾಯ್ಕ ಇದ್ದರು.