ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶೌರ್ಯ, ಸಾಹಸ ಮಾಡಿರುವ 6 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.
ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಕರಣವು (ಘಟನೆ) ಆಗಸ್ಟ್-2020 ರಿಂದ ಜುಲೈ-2021 ರೊಳಗೆ ನಡೆದಿರಬೇಕು. 2003 ಆಗಸ್ಟ್ 1ರ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರು.10000 ರು.ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುವುದು.2021-22 ನೇ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಯಸುವವರು ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ ರೊಳಗಡೆ, ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರವಾರ ಇವರಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.