ಸಿದ್ದಾಪುರ: ಶಿರಸಿ ಹಾಗೂ ಸಿದ್ದಾಪುರ ತಾಲೂಕಿನಲ್ಲಿ ದಿನದಿಂದ ದಿನಕ್ಕೆ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ನದಿಯಂಚಿನ ಹಾಗೂ ತಗ್ಗು ಪ್ರದೇಶದಲ್ಲಿರುವ ಜನತೆ ಸುರಕ್ಷಿತ ಸ್ಥಳದಲ್ಲಿರಬೇಕು ಎಂದು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.
ತಾಲೂಕಿನ ವಿವಿಧೆಡೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಸಾಲಿಗಿಂತ ಈ ಬಾರಿ ಅತ್ಯುತ್ತಮ ಮಳೆಯಾಗಿರುವುದು ತುಂಬಾ ಖುಷಿಯ ಸಂಗತಿ. ಜತೆಗೆ ಮಳೆಯಿಂದ ಸಾಕಷ್ಟು ಕಡೆ ಮನೆ, ಜಾನುವಾರು, ರಸ್ತೆ, ಕೃಷಿ ಕ್ಷೇತ್ರಕ್ಕೆ ತುಂಬಾ ಹಾನಿಯಾಗಿದೆ. ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನದಿ ಪಾತ್ರದ ಹಾಗೂ ತಗ್ಗು ಪ್ರದೇಶಗಳಲ್ಲಿರುವ ಜನ ಸುರಕ್ಷಿತ ಪ್ರದೇಶಗಳತ್ತ ಧಾವಿಸಬೇಕು. ಅಧಿಕಾರಿಗಳು ಅಂತಹ ಪ್ರದೇಶಗಳನ್ನು ಗುರುತಿಸಿ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದರು.
ಈಗಾಗಲೇ ಮನೆ ಹಾನಿಯಾದವರಿಗೆ ಸರ್ಕಾರದ ಸಹಾಯಧನದ ಚೆಕ್ ನೀಡಲಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಮಾನವೀಯತೆ ದೃಷ್ಟಿಯಿಂದ ಸರ್ಕಾರಕ್ಕೆ ನೈಜ ವರದಿ ನೀಡಬೇಕು. ರಸ್ತೆ, ಸೇತುವೆ, ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಆದ ಹಾನಿಯ ಸಮಗ್ರ ವರದಿ ತಯಾರಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.
ಈ ವೇಳೆ ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ತಾಪಂ ಇಓ ದೇವರಾಜ ಹಿತ್ತಲಕೊಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ, ಸಹಾಯಕ ಕೃಷಿ ನಿರ್ದೇಶಕಿ ಸುಮಾ ಎಸ್.ಎಂ, ಸಿಪಿಐ ಕುಮಾರ ಕೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.