Slide
Slide
Slide
previous arrow
next arrow

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ: ಸಚಿವ ಮಂಕಾಳ ವೈದ್ಯ

300x250 AD

ಕುಮಟಾ: ಜಿಲ್ಲೆಯ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದೇ ಇರುವ ಬಗ್ಗೆ ದೂರುಗಳು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಎಚ್ಚರಿಕೆ ನೀಡಿದರು.
ಅವರು ಮಂಗಳವಾರ ಕುಮಟಾ ತಾಲೂಕಿನ ದೀವಗಿಯ ಹಾಲಕ್ಕಿ ಒಕ್ಕಲಿಗರ ಭವನದಲ್ಲಿ ನಡೆದ, ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜನ ಸಾಮಾನ್ಯರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು, ಅವರು ಇರುವ ಕಡೆಗಳಿಗೆ ಎಲ್ಲಾ ಅಧಿಕಾರಿಗಳೊಂದಿಗೆ ತೆರಳಿ ಅವುಗಳನ್ನು ಪರಿಹರಿಸುವ ಉದ್ದೇಶದಿಂದ ಜಾರಿಗೊಳಿಸಿರುವ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗುವ ಎಲ್ಲಾ ಅರ್ಜಿಗಳನ್ನು ಕಾಲಮಿತಿಯೊಳಗೆ ಬಗೆಹರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಸರ್ಕಾರಿ ಕಚೇರಗಳಿಗೆ ಆಗಮಿಸಿ ಸಮಸ್ಯೆ ಹೇಳಿಕೊಳ್ಳುವ ಸಾರ್ವಜನಿಕ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದ ಅಧಿಕಾರಿಗಳ ವಿರುದ್ದ ಕೂಡಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಇದುವರೆಗೆ ನಡೆದಿರುವ ಜಿಲ್ಲಾ ಮಟ್ಟದ 2 ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿರುವ 323 ಅರ್ಜಿಗಳಲ್ಲಿ ಎಲ್ಲಾ 323 ಅರ್ಜಿಗಳನ್ನೂ ಸಮರ್ಪಕವಾಗಿ ವಿಲೇವಾರಿ ಮಾಡಿ ಶೇ.100 ರಷ್ಟು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಾಗಿದೆ ಎಂದ ಸಚಿವರು, ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಲ್ಲಿಕೆಯಾಗುವ ಎಲ್ಲಾ ಅರ್ಜಿಗಳೂ ಸೂಕ್ತ ಪರಿಹಾರ ದೊರಯುವುದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದ ಪ್ರಯೋಜನ ಪಡೆಯಬೆಕು ಎಂದರು.

ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಮಾತನಾಡಿ, ಜನಸ್ಪಂದನಾ ಸಭೆಯಲ್ಲಿ ಸ್ವೀಕರಿಸಲಾಗುವ ಪ್ರತಿಯೊಂದು ಅರ್ಜಿಗಳನ್ನೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಸಾರ್ವಜನಿಕರಿಗೆ ಅಗತ್ಯ ನೆರವು ಒದಗಿಸಬೇಕು ಈ ಅರ್ಜಿಗಳ ವಿಲೇವಾರಿಯಲ್ಲಿ ನಿರ್ಲಕ್ಷ್ಯತನ ತೋರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ನಂತರ ನಡೆದ ಸಾರ್ವಜನಿಕ ಅರ್ಜಿಗಳ ಪರಿಶೀಲನೆ ವೇಳೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿಗಳ ವಿರುದ್ದ ಸಾರ್ವಜನಿಕರು ಹಲವು ದೂರುಗಳನ್ನು ಸಲ್ಲಿಸಿದ್ದು, ಇತ್ತೀಚೆಗೆ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಿಂದ ನೀರು ಪಾಲಾಗಿದ್ದ ಗ್ಯಾಸ್ ಟ್ಯಾಂಕರ್ ಇದ್ದ ಸೇತುವೆ ಬಳಿ ಸೂಕ್ತ ರಕ್ಷಣಾ ತಡೆಗೋಡೆ ನಿರ್ಮಿಸುವಂತೆ ಹಲವು ಬಾರಿ ಮನವಿ ಮಾಡಿದ್ದರು ಕೂಡಾ ಸ್ಪಂದಿಸುತ್ತಿಲ್ಲ, ಅತ್ಯಂತ ಅಗತ್ಯವಿರುವಡೆ ಡಿವೈಡರ್ ಓಪನ್ ಮಾಡುವಂತೆ, ರಸ್ತೆ ಕಾಮಗಾರಿಯಿಂದ ಮನೆಗೆ ಮಳೆ ನೀರು ನುಗ್ಗುತ್ತಿರುವ ಬಗ್ಗೆ ಸಾರ್ವಜನಿಕರು ದೂರಿದರು. ಈ ಎಲ್ಲಾ ದೂರುಗಳ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ವರದಿ ನೀಡುವುದರ ಜೊತೆಗೆ ತುರ್ತಾಗಿ ಅಗತ್ಯವಿರುವ ಕಾಮಗಾರಿ ಕೈಗೊಳ್ಳುವಂತೆ ಸಚಿವರು ಸೂಚಿಸಿದರು.
ಕುಮಟಾದಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆ, ರಸ್ತೆಗಳ ಅಗಲೀಕರಣ, ರಸ್ತೆಗಳಲ್ಲಿ ಗುಂಡಿಗಳನ್ನು ಸರಿಪಡಿಸುವುದು, ಕುಮಟಾ ತಾಲೂಕು ಆಡಳಿತ ಸೌಧದಲ್ಲಿ ಸ್ವಚ್ಛತೆ ಕಾಪಾಡುವುದು, ಸಬ್ ರಿಜಿಸ್ಟಾçರ್ ಕಚೇರಿಯನ್ನು ಇದೇ ಕಟ್ಟಡಕ್ಕೆ ಸ್ಥಳಾಂತರಿಸುವುದು, ತಹಸೀಲ್ದಾರ್ ನೇಮಕ , ಮಿರ್ಜಾನ್ ಬಳಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಯಾಣ ರಸ್ತೆ ದುರಸ್ತಿ, ಹೋಮ್ ಸ್ಟೇ ಗಳ ಲೈಸೆನ್ಸ್ ನವೀಕರಣ, ಸೌತೆಗುಳಿ ಶಾಲೆಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಬಗ್ಗೆ, ಮೇದಿನಿ ರಸ್ತೆ ದುರಸ್ತಿ, ಚಂಡಿಕಾ ನದಿಗೆ ಸೇತುವೆ ನಿರ್ಮಾಣ ಮತ್ತಿತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರುಗಳನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 130 ಕ್ಕೂ ಅಧಿಕ ಅಹವಾಲುಗಳನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಭೀಮಣ್ಣ ನಾಯ್ಕ್, ಶಾಂತಾರಾಮ ಸಿದ್ದಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್, ಜಿಲ್ಲಾ ಪಂಚಾಯತ್ ಸಿಇಓ ಈಶ್ವರ ಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ , ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸದ್ಭಾವನಾ ದಿನದ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

300x250 AD
Share This
300x250 AD
300x250 AD
300x250 AD
Back to top