ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ. ಸೆಪ್ಟೆಂಬರ್ ಮೊದಲ ವಾರದಿಂದಲೂ ರಾಜ್ಯದ ವಿವಿಧೆಡೆ ವರುಣನ ಆರ್ಭಟ ಹೆಚ್ಚಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಕರಾವಳಿ ಹಾಗೂ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಅಧಿಕ ಮಳೆಯಾಗಲಿದ್ದು, ಭಾರೀ ಮಳೆಯ ಕಾರಣದಿಂದಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ.
ವಾಡಿಕೆಗಿಂತ ಹೆಚ್ಚು ಮಳೆ ಸೆಪ್ಟೆಂಬರ್ ತಿಂಗಳಿನಲ್ಲಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜುಲೈ ತಿಂಗಳಿನಲ್ಲಿ ಉತ್ತಮ ಮಳೆಯಾಗಿತ್ತು. ಜುಲೈಗೆ ಹೋಲಿಕೆ ಮಾಡಿದರೆ ಆಗಸ್ಟ್‍ನಲ್ಲಿ ಮಳೆಯ ಪ್ರಮಾಣ ಕಡಿಮೆ ಇತ್ತು. ಆದರೆ ಸೆಪ್ಟೆಂಬರ್‍ನಲ್ಲಿ ವಾಯುಭಾರ ಕುಸಿತದಿಂದಾಗಿ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.