ಕಾರವಾರ: ಸೆ.15 ರ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಸಿದ್ದತೆಗಳನ್ನು ಕೈಗೊಳ್ಳುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಸೂಚನೆ ನೀಡಿದರು.
ಅವರು ಸೋಮವಾರ, ಜಿಲ್ಲಾಧಿಕಾರಿ ಕಚೆರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ಆಚರಣೆ ಪ್ರಯುಕ್ತ ಈಗಾಗಲೇ ಸೂಚಿಸಿರುವಂತೆ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ರಚಿಸಲು ಅಂತಿಮ ಸಿದ್ದತೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿನ ಅರಣ್ಯ ಪ್ರದೇಶ ಮತ್ತು ಅಪಾಯಕಾರಿ ಗುಡ್ಡಕುಸಿತ ಪ್ರದೇಶಗಳ ವ್ಯಾಪ್ತಿಯನ್ನು ಹೊರತುಪಡಿಸಿ ಇತರೆ ಮಾರ್ಗದಲ್ಲಿ ಮಾನವ ಸರಪಳಿ ರಚನೆ ಕುರಿತಂತೆ ಸಂಬಂಧಪಟ್ಟ ವ್ಯಾಪ್ತಿಯ ತಹಸೀಲ್ದಾರ್‌ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಓ ಗಳು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಿದರು.
ಪ್ರಜಾಪ್ರಭುತ್ವದ ಮೂಲ ಉದ್ದೇಶದಂತೆ ಎಲ್ಲರನ್ನೂ ಒಳಗೊಳ್ಳುವ ರೀತಿಯಲ್ಲಿ, ಜಿಲ್ಲೆಯಲ್ಲಿನ ಎಲ್ಲಾ ಜನಪ್ರತಿನಿಧಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಸ್ವ ಸಹಾಯ ಸಂಘಗಳು, ಜಿಲ್ಲೆಯ ಬುಡಕಟ್ಟು ಜನಾಂಗದವರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗಳು ಸೇರಿದಂತೆ ಪ್ರತಿಯೊಬ್ಬರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ಆಚರಣೆ ಆಗುವಂತೆ ನೋಡಿಕೊಳ್ಳಬೇಕು ಎಂದರು.
ರಾಜ್ಯಾದ್ಯಂತ ಏಕಕಾಲದಲ್ಲಿ ಬೆಳಗ್ಗೆ 9 ಗಂಟೆಯಿಂದ ಆರಂಭಗೊಳ್ಳುವ ಮಾನವ ಸರಪಳಿ ರಚನೆಯ ಕಾರ್ಯಕ್ರಮದ ಜೊತೆಗೆ ಇದೇ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ಗಿಡ ನೆಡುವ ಕಾರ್ಯಕ್ರಮವನ್ನು ವ್ಯವಸ್ಥಿತ ರೀತಿಯಲ್ಲಿ ಆಯೋಜಿಸುವಂತೆ ತಿಳಿಸಿದರು.
ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆವತಿಯಿಂದ ಅಗತ್ಯ ಭದ್ರತೆ ಒದಗಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಇಲಾಖೆಯ ಮೂಲಕ ಆರೋಗ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಅಗತ್ಯ ಸಹಕಾರ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಮಾನವ ಸರಪಳಿ ರಚನೆಯಾಗುವ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಕುರಿತಂತೆ, ಈ ಕಾರ್ಯಕ್ರಮದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಉಮೇಶ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.