ದಾಂಡೇಲಿ : ನಗರದಲ್ಲಿ ಬಿಡಾಡಿ ನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗತೊಡಗಿದ್ದು, ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ಶುಕ್ರವಾರ ರಾತ್ರಿ ಲೆನಿನ್ ರಸ್ತೆಯ ಕೆ.ಎಚ್.ಬಿ ಕಾಲೋನಿಯಲ್ಲಿ ಪುಟ್ಟ ಬಾಲಕನ ಮೇಲೆ ಬೀಡಾಡಿ ನಾಯಿಗಳ ಹಿಂಡೊಂದು ದಾಳಿ ಮಾಡಿತ್ತು. ಬಿಡಾಡಿ ನಾಯಿಗಳ ನಿಯಂತ್ರಣಕ್ಕೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿ ಬರುತ್ತಿದೆ.
ಶನಿವಾರ ನಗರದಲ್ಲಿ ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ ಮತ್ತು ಪೌರಾಯುಕ್ತರಾದ ಆರ್.ಎಸ್.ಪವಾರ್ ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ ಬಿಡಾಡಿ ನಾಯಿಗಳ ನಿಯಂತ್ರಣಕ್ಕೆ ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು. ಈಗಾಗಲೇ ಪಶುವೈದ್ಯರು, ಸಾರ್ವಜನಿಕ ಆರೋಗ್ಯ ವೈದ್ಯಾಧಿಕಾರಿಯವರನ್ನೊಳಗೊಂಡು ಒಂದು ಸುತ್ತಿನ ಸಭೆ ನಡೆಸಿ ಚರ್ಚಿಸಲಾಗಿದೆ. ಈ ನಿಟ್ಟಿನಲ್ಲಿ ಸೆಪ್ಟೆಂಬರ್ 19ರಂದು ನಡೆಯಲಿರುವ ಸಾಮಾನ್ಯ ಸಭೆಯಲ್ಲಿಯೂ ಈ ಬಗ್ಗೆ ವಿಶೇಷ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.