ಕಾರವಾರ: ಪ್ರಸ್ತುತ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪ್ರಗತಿಗೆ ಹೆಚ್ಚು ಒತ್ತು ನೀಡು, ನಿಗಧಿತ ಗುರಿ ಸಾಧಿಸುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಹೇಳಿದರು.
ಅವರು ಬುಧವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ತಾಲೂಕು ಸಹಾಯಕ ನಿರ್ದೇಶಕರು (ಗ್ರಾ.ಉ) ಮತ್ತು ತಾಂತ್ರಿಕ ವರ್ಗದವರಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾನವ ದಿನಗಳ ಸೃಜನೆ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯತಿಗಳ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಕಡಿಮೆ ಮಾನವ ದಿನ ಸೃಜಿಸುವ ಗ್ರಾಮಗಳನ್ನು ಕೇಂದ್ರೀಕರಿಸಿ ಹೆಚ್ಚೆಚ್ಚು ಐಇಸಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಆದ್ಯತಾ ಕಾಮಗಾರಿಗಳಾದ ಶಾಲಾ ಕಾಂಪೌಂಡ್, ಶೌಚಾಲಯ, ಆಟದ ಮೈದಾನ, ಕೊಳವೆ ಬಾವಿ ಮರುಪೂರಣ ಘಟಕ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಂಡು, ಆದಷ್ಟು ಶೀಘ್ರದಲ್ಲಿ ಪೂರ್ಣಗೊಳಿಸಬೇಕು ಎಂದರು. ಜೊತೆಗೆ ವರ್ಕ್ ಕಂಪ್ಲೀಷನ್, ಎಸ್.ಎಚ್.ಜಿ. ವರ್ಕ್ ಶೆಡ್, ಜಿಯೋ ಟ್ಯಾಗ್ ಮತ್ತು ಆಧಾರ್ ಸೀಡಿಂಗ್ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಿ, ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರು ಕರೀಂ ಅಸಾದಿ, ಎಲ್ಲ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು (ಗ್ರಾ.ಉ), ಎಡಿಪಿಸಿ ನಾಗರಾಜ್ ನಾಯ್ಕ, ಡಿ.ಎಮ್.ಆಯ್.ಎಸ್. ಶಿವಾಜಿ ಬೊಬಲಿ, ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ, ಎ.ಎಮ್. ವಿಘ್ನೇಶ್, ತಾಲೂಕು ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ತಾಲೂಕಾ ಎಮ್‌ಆಯ್‌ಎಸ್ ಸಂಯೋಜಕರು ಮತ್ತು ತಾಲೂಕಾ ಐಇಸಿ ಸಂಯೋಜಕರು ಉಪಸ್ಥಿತರಿದ್ದರು.