ಶಿರಸಿ: ಶಿರಸಿಯಲ್ಲಿರುವ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಗುರುವಾರ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸುಜಾತಾ ಗಾಂವಕರ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುಜಾತಾ ಗಾಂವಕರ ಈ ದೇಶದಲ್ಲಿ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಗೆ ತಂದ ಪಕ್ಷವಿದ್ದರೆ ಅದು ಕಾಂಗ್ರೆಸ್. ಮಹಿಳೆಯರಿಗಾಗಿ ಹತ್ತು ಹಲವು ಜನಪರ ಯೋಜನೆಗಳನ್ನು ಅನುಷ್ಠಾನ ಪಡಿಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು. ರಾಜ್ಯದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ವಿಶೇಷವಾಗಿ ಮಹಿಳೆಯರಿಗೆ ಅನುಕೂಲವಾಗಲೆಂದೇ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಯನ್ನು ಅನುಷ್ಟಾನ ಪಡಿಸಿದೆ. ಇಡೀ ದೇಶವೇ ಮೆಚ್ಚಿದ ಗ್ಯಾರಂಟಿ ಯೋಜನೆಯನ್ನು ನೀಡಿದ ನಮ್ಮ ಕಾಂಗ್ರೆಸ್ ಸರಕಾರದ ಸಾಧನೆಗಳು ಅಪಾರವಾಗಿದೆ. ರಾಜ್ಯ ಸರಕಾರದ ಜನಪರ ಯೋಜನೆಗಳು ಮತ್ತು ಸಾಧನೆಗಳನ್ನು ಮುಂದಿಟ್ಟುಕೊಂಡು ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನವನ್ನು ಜಿಲ್ಲೆಯಾದ್ಯಂತ ಯಶಸ್ವಿಗೊಳಿಸುವ ಕಾರ್ಯವನ್ನು ಮಹಿಳಾ ಕಾಂಗ್ರೆಸ್ ಸಮಿತಿಗಳು ಜವಾಬ್ದಾರಿಯಿಂದ ಮಾಡಬೇಕೆಂದು ಕರೆ ನೀಡಿದರು. ಜಿಲ್ಲೆಯ ಎಲ್ಲಾ ತಾಲೂಕುಗಳ ಮಹಿಳಾ ಕಾಂಗ್ರೆಸ್ ಸಮಿತಿಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಸದ್ಯಸ್ಯತ್ವ ಅಭಿಯಾನದ ಬಗ್ಗೆ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಅಧ್ಯಕ್ಷರಾದ ಪ್ರಸನ್ನ ಶೆಟ್ಟಿ ಮತ್ತು ಯಲ್ಲಾಪುರ ತಾಲೂಕು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಅಧ್ಯಕ್ಷೆ ಮುಸ್ರತ್ ಖಾನ್ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದಾಂಡೇಲಿಯ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷ ರೇಣುಕಾ ಬಂದಂ ಅವರು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಮಹಿಳೆಯರನ್ನು ಪಕ್ಷದ ಸದಸ್ಯರನ್ನಾಗಿಸುವ ಪ್ರಾಮಾಣಿಕ ಕಾರ್ಯವನ್ನು ನಾವು ನೀವೆಲ್ಲರೂ ಸೇರಿ ಒಗ್ಗಟ್ಟಿನಿಂದ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಜಿಲ್ಲೆಯ ತಾಲೂಕು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ನಂತರ ಸುಜಾತಾ ಗಾವಂಕರ ಅವರ ಅಧ್ಯಕ್ಷತೆಯಲ್ಲಿ ಪಕ್ಷ ಸಂಘಟನೆಯ ಕುರಿತು ಸಭೆ ನಡೆಯಿತು.