ಕುಮಟಾ: ಮಾನವನ ದೇಹ ಮತ್ತು ದೇಶದ ಆರೋಗ್ಯ ಸದೃಢವಾಗಿರಬೇಕಾದರೆ ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿರುವಂತೆ ಜಾಗೃತಿ ವಹಿಸಬೇಕು ಎಂದು ತಾಲೂಕು ಪಂಚಾಯತ್ ಮನರೇಗಾ ಸಹಾಯಕ ನಿರ್ದೇಶಕ ವಿನಾಯಕ ನಾಯ್ಕ ಹೇಳಿದರು.
ಕುಮಟಾ ತಾಲೂಕಿನ ನಾಡುಮಾಸ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ, ಮಹಾತ್ಮ ಗಾಂಧಿ ನರೇಗಾ ಯೋಜನೆ ವತಿಯಿಂದ ಶನಿವಾರ ನಡೆದ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನದಡಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಮಾತನಾಡಿ, ಹಳ್ಳಿಗಳಲ್ಲಿ ಬೂದು ನೀರಿನ ನಿರ್ವಹಣೆ, ಜಲಮೂಲಗಳ ರಕ್ಷಣೆ, ಯೋಜನೆಯಡಿ ಲಭ್ಯವಿರುವ ವೈಯಕ್ತಿಕ ಮತ್ತು ಸಮುದಾಯ ಸೌಲಭ್ಯಗಳ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.
ಸ್ವಚ್ಛತಾ ಕಾರ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಈಶ್ವರ್ ವೆಂಕಟ್ರಮಣ ಗೌಡ, ಉಪಾಧ್ಯಕ್ಷೆ ವಿಜಯಾ ಕೃಷ್ಣಾನಂದ ನಾಯ್ಕ, ಸದಸ್ಯರು, ಕೂಲಿಕಾರರು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಮತ್ತು ಸ್ವಚ್ಛತಾ ಸಿಬ್ಬಂದಿ ಭಾಗವಹಿಸಿದ್ದರು.