ಕಾರವಾರ: ಜಿಲ್ಲೆಯಲ್ಲಿ ಸೆ.29ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಹುದ್ದೆಗೆ ನಡೆಯುವ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಯಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ, ಪಾರದರ್ಶಕವಾಗಿ ಪರೀಕ್ಷೆ ನಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ತಿಳಿಸಿದರು.
ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ 5844 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಯಾವುದೇ ರೀತಿಯ ಲೋಪಗಳು ಆಗದಂತೆ ಪರೀಕ್ಷಾ ಗೌಪ್ಯತೆ ಮತ್ತು ಪಾವಿತ್ರ್ಯತೆಗೆ ಭಂಗವಾಗದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಿಸಿಟಿವಿ ಅಳವಡಿಸಲು ತಿಳಿಸಿದ ಅವರು, ಪ್ರಶ್ನೆ ಪತ್ರಿಕೆಗಳನ್ನು ಖಜಾನೆಯಿಂದ ಪೊಲೀಸ್ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಮತ್ತು ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಯನ್ನು ಜಿಲ್ಲಾ ಖಜಾನೆಗೆ ಭದ್ರವಾಗಿ ತಲುಪಿಸಬೇಕು ಎಂದರು.
ಪರೀಕ್ಷಾ ಕೇಂದ್ರಗಳ ಸುತ್ತಲು ವಿಧಿಸಿದ 200 ಮೀ. ವ್ಯಾಪ್ತಿಯಲ್ಲಿನ ನಿಷೇಧಾಜ್ಞೆಯನ್ನು ಕಡ್ಡಾಯವಾಗಿ ಎಲ್ಲರು ಪಾಲಿಸಬೇಕು ಮತ್ತು ಪರೀಕ್ಷೆ ನಡೆಯುವ ದಿನದಂದು ನಿರಂತರ ವಿದ್ಯುತ್ ಪೂರೈಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮಹಿಳಾ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಅಭ್ಯರ್ಥಿಗಳು ತಲುಪಲು ಪರೀಕ್ಷಾ ದಿನದಂದು ನಿಗದಿತ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳುವಂತೆ ಕೆಎಸ್‌ಆರ್‌ಟಿ ವ್ಯವಸ್ಥಾಪಕರಿಗೆ ಸೂಚನೆ ನೀಡಿದ ಅವರು, ಅಭ್ಯರ್ಥಿಗಳಿಗೆ ಯಾವುದೇ ರೀತಿಯ ರೀತಿಯ ತೊಂದರೆಯಾಗದಂತೆ ಮುನ್ನೇಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲೆಯಲ್ಲಿ ಇದುವರೆಗೆ ನಡೆದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳು ಯಾವುದೇ ದೂರುಗಳಿಗೆ ಆಸ್ಪದ ನೀಡದೇ ಯಶಸ್ವಿಯಾಗಿ ನಡೆಸಲಾಗಿದ್ದು, ಪ್ರಸ್ತುತ ನಡೆಯುವ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಯಶಸ್ವಿಗೊಳಿಸುವಂತೆ ಹೇಳಿದರು. ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಪ್ಪ ಕೆ.ಹೆಚ್, ವಿವಿಧ ಕಾಲೇಜು ಮುಖ್ಯಸ್ಥರು, ಪರೀಕ್ಷಾ ವೀಕ್ಷಕರು ಮತ್ತಿತರರು ಇದ್ದರು