ಯಲ್ಲಾಪುರ: ಆಸ್ಪತ್ರೆಯಲ್ಲಿ ಕೆಲಸ ಮಾಡುವುದರ ಜೊತೆಗೆ ಪಟ್ಟಣದಲ್ಲಿ ಖಾಸಗಿ ಆಸ್ಪತ್ರೆಯನ್ನು ತೆರೆದುಕೊಂಡಿದ್ದಾರೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸಾರ್ವಜನಿಕರಿಂದ ಹಣ ಪಡೆಯುತ್ತಾರೆ ಎಂಬ ಆರೋಪ ಎದುರಿಸುತ್ತಿದ್ದ ಇಲ್ಲಿನ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಭರತ ತಂತ್ರಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
ಇವರು ಕಳೆದ ಎರಡು ವರ್ಷಗಳಿಂದ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ರಾಜೀನಾಮೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ತಮ್ಮ ಸರಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ತಾಲೂಕು ಆಡಳಿತ ಅಧಿಕಾರಿ ಎಚ್. ಎಪ್. ಇಂಗಳೆ ತಿಳಿಸಿದ್ದಾರೆ. ಕಳೆದ ಎರಡು ಮೂರು ತಿಂಗಳ ಹಿಂದೆ ತಾಲೂಕಿನ ಚವಡಳ್ಳಿ ಗ್ರಾಮದ ಮಗುವೊಂದು ಇವರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂಬ ಆರೋಪ ಕೂಡ ಕೇಳಿ ಬಂದಿದ್ದು, ಇವರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಹಾಗೂ ಡಿ. ಎಚ್. ಓ ಅವರಿಗೆ ಹಲವು ಜನರು ದೂರಿದ್ದರು.