ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇತ್ತೀಚಿಗೆ ಶಿರಸಿಯಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಕು. ಗಣೇಶ ನಾಯಕ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಹಾಗೆಯೇ ಚಕ್ರ ಎಸೆತದಲ್ಲಿ ತೃತೀಯ ಸ್ಥಾನವನ್ನು ಪಡೆದಿದ್ದಾನೆ. ಕು. ಆರ್ಜೊ ಖಾನ್ ಹಾಗೂ ಕು. ಪ್ರತ್ವಿನ್ ಶೆಟ್ಟಿ ಕರಾಟೆಯಲ್ಲಿ, ಕು. ಇಂಚರಾ ಭಂಡಾರಿ ಹಾಗೂ ಕು. ಪಾವನಿ ನಾಯ್ಕ ಯೋಗದಲ್ಲಿ, ಕು. ಸಂಜನಾ ಶಾನಭಾಗ ಟೇಬಲ್ ಟೆನ್ನಿಸ್ ನಲ್ಲಿ ಉತ್ತಮ ಪ್ರದರ್ಶನ ನೀಡುವುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಮುಂದಿನ ದಿನಗಳಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಹಾಗೆಯೇ ಜಿಲ್ಲಾ ಮಟ್ಟದ ಬಾಲಕರ ವಿಭಾಗದ ಥ್ರೋ ಬಾಲ್ ನಲ್ಲಿ ಧೀರಜ್ ನಾಯಕ ಮತ್ತು ತಂಡದವರು ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿಯವರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಕ್ರೀಡಾ ಸಂಯೋಜಕರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.