ಆರೋಗ್ಯ, ಶಿಕ್ಷಣಕ್ಕೆ ಮೊದಲ ಆದ್ಯತೆ : ಆರ್.ವಿ. ದೇಶಪಾಂಡೆ
ದಾಂಡೇಲಿ : ಆರೋಗ್ಯ ಮತ್ತು ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡುತ್ತಾ ಬಂದಿದ್ದೇವೆ. ಸಮೃದ್ಧ ಆರೋಗ್ಯದಿಂದ ಮತ್ತು ಶಿಕ್ಷಣದಿಂದ ರಾಷ್ಟ್ರದ ಪ್ರಗತಿ ಸುಲಭ ಸಾಧ್ಯ. ಈ ನಿಟ್ಟಿನಲ್ಲಿ ಆರೋಗ್ಯಕ್ಕೆ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು. ರಾಜ್ಯ ಸರ್ಕಾರವು ಶಿಕ್ಷಣ ಕ್ಷೇತ್ರದ ಬಲವರ್ಧನೆಗಾಗಿ ಹಲವಾರು ಜನೋಪಯೋಗಿ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. ಕ್ಷೇತ್ರದಲ್ಲಿರುವ ಶಾಲೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗಿದೆ. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಪೂರಕ ಆಹಾರ ಯೋಜನೆಯಡಿ ಪೂರಕ ಪೌಷ್ಟಿಕ ಆಹಾರ ವಿತರಣೆಯನ್ನು ಆರಂಭಿಸಲಾಗಿದೆ ಎಂದು ಶಾಸಕರಾದ ಆರ್.ವಿ.ದೇಶಪಾಂಡೆ ಹೇಳಿದರು.
ಅವರು ಗುರುವಾರ ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಶಾಲಾ ಶಿಕ್ಷಣ ಇಲಾಖೆ, ಸಿಎಂ ಪೋಷನ್ ಶಕ್ತಿ ನಿರ್ಮಾಣ್ ಯೋಜನೆ, ತಾಲೂಕು ಪಂಚಾಯತ್ ಕಾರ್ಯಾಲಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನಲ್ಲಿ ರಾಜ್ಯ ಸರಕಾರದೊಂದಿಗೆ ಕೈಜೋಡಿಸಿರುವ ಅಜಿಮ್ ಪ್ರೇಮ್ ಜಿ ಫೌಂಡೇಶನ್ ಫಾರ್ ಡೆವಲಪ್ಮೆಂಟ್ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಪೂರಕ ಪೌಷ್ಟಿಕ ಆಹಾರಕ್ಕಾಗಿ ಮೊಟ್ಟೆ, ಬಾಳೆಹಣ್ಣು ಶೇಂಗಾ ಚಿಕ್ಕಿ ಮೊದಲಾದವುಗಳ ಪೂರಕ ಪೌಷ್ಟಿಕ ಆಹಾರ ವಿತರಣೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ವಹಿಸಿ ಸತತ ಅಧ್ಯಯನಶೀಲರಾಗಿ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ್ ವಹಿಸಿದ್ದರು. ವೇದಿಕೆಯಲ್ಲಿ ನಗರಸಭೆಯ ಉಪಾಧ್ಯಕ್ಷೆ ಶಿಲ್ಪಾ ಕೋಡೆ, ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಸುಧಾ ರಾಮಲಿಂಗ ಜಾಧವ, ತಹಶೀಲ್ದಾರ್ ಶೈಲೇಶ ಪರಮಾನಂದ, ಪೌರಾಯುಕ್ತರಾದ ಆರ್.ಎಸ್.ಪವಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ್ ಮಹಾಲೆ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾದ ಎಸ್.ಎಸ್.ನೂಲಿನ್, ಶಾಲಾ ಮುಖ್ಯೋಪಾಧ್ಯಾಯನಿ ಬಿ.ಎಂ.ಜುಬೇದಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ ಹಲವಾಯಿ, ನಗರಸಭಾ ಸದಸ್ಯರುಗಳಾದ ಯಾಸ್ಮಿನ್ ಕಿತ್ತೂರು, ಸರಸ್ವತಿ ರಜಪೂತ, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷರಾದ ರಿಯಾಜ್ ಬಾಬು ಸೈಯದ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಹಾಂತೇಶ ಗುತ್ತಣ್ಣನವರ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ, ಸ್ವಾಗತ ಕಾರ್ಯಕ್ರಮಕ್ಕೆ ಸಿ.ಆರ್.ಪಿ ಶ್ರೀದೇವಿ ವಂದಿಸಿದರು ಸಿ.ಆರ್.ಪಿ ಲಲಿತ ಕಾರ್ಯಕ್ರಮವನ್ನು ನಿರೂಪಿಸಿದರು.