ಜೋಯಿಡಾ : 70ನೇ ವನ್ಯಜೀವಿ ಸಪ್ತಾಹದ ನಿಮಿತ್ತ ಕಾಳಿ ಹುಲಿ ಅರಣ್ಯ ಸಂರಕ್ಷಿತ ಪ್ರದೇಶ ವಿಭಾಗದ ಆಶ್ರಯದಡಿ ಜೋಯಿಡಾ ತಾಲೂಕಿನ ಕುಂಬಾರವಾಡದ ಕ್ಷೇತ್ರಪಾಲ ದೇವಸ್ಥಾನದ ಹತ್ತಿರದ ಮೈದಾನದಲ್ಲಿ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಯಿತು.
ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಶಂಕರಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಯ ಜಾಗೃತಿಗಾಗಿ ಪ್ರತಿ ವರ್ಷವೂ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಈ ಬಾರಿ 70ನೇ ವನ್ಯಜೀವಿ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ರೀತಿಗಳಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಅರಣ್ಯ ಮತ್ತು ವನ್ಯಪ್ರಾಣಿಗಳ ರಕ್ಷಣೆಗೆ ಇಲಾಖೆಯ ಜೊತೆ ಸಾರ್ವಜನಿಕರು ಕೈಜೋಡಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಎ.ಎಸ್.ಬೈಲಾ ಹಾಗೂ ಉಪ ವಲಯಾರಣ್ಯಾಧಿಕಾರಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ತಾಲೂಕಿನ ವಿವಿಧೆಡೆಗಳ ಕ್ರೀಡಾಪಟುಗಳು ಭಾಗವಹಿಸಿದ್ದರು.