ಯಲ್ಲಾಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದ ಲಕ್ಷಾಂತರ ಕುಟುಂಬಗಳ ಜೀವನೋಪಾಯಕ್ಕೆ ದಾರಿಯಾಗಿದೆ. ಮಹಿಳೆಯರ ಸಬಲೀಕರಣಕ್ಕೂ ಯೋಜನೆ ಒತ್ತು ನೀಡಿದೆ ಎಂದು ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಮಂಜುನಾಥ ಬಿ. ಆಗೇರ್ ಹೇಳಿದರು.
ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತ್ ಮತ್ತು ಕುಂದರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಂಗಳವಾರ, 2025-26 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ತಯಾರಿಸುವ ನಿಟ್ಟಿನಲ್ಲಿ ಯೋಜನೆಯ ಬಗ್ಗೆ ವ್ಯಾಪಕ ಜನಜಾಗೃತಿ ಮತ್ತು ಕಾಮಗಾರಿ ಬೇಡಿಕೆ ಸಂಗ್ರಹಿಸುವ ಸಲುವಾಗಿ ಆರಂಭಿಸಲಾದ “ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ” ಅಭಿಯಾನದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುಂದಿನ ಆರ್ಥಿಕ ಮುಂದಿನ ಆಯವ್ಯಯ ತಯಾರಿಸಲು ಅಭಿಯಾನದ ಮೂಲಕ ಸಾರ್ವಜನಿಕರಿಂದ ಕಾಮಗಾರಿ ಬೇಡಿಕೆ ಸಂಗ್ರಹಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ತಮಗೆ ಅಗತ್ಯವಿರುವ ಕಾಮಗಾರಿಗಳಿಗೆ ಹೆಸರು ನೀಡಿದರೆ, ಗ್ರಾಮ ಸಭೆಯಲ್ಲಿ ವಿಷಯ ಮಂಡಿಸಿ, ಕ್ರಿಯಾ ಯೋಜನೆ ತಯಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ಐಇಸಿ ಸಂಯೋಜಕರಾದ ಕಿರಣ ಜೋತೆಪ್ಪನವರ ಮಾತನಾಡಿ, ಯೋಜನೆಯಡಿ ಲಭ್ಯವಿರುವ ಉದ್ಯೋಗ ಅವಕಾಶ, ಕೂಲಿ ಮೊತ್ತ, ಹಿರಿಯ ನಾಗರಿಕರು ಮತ್ತು ವಿಶೇಷ ಚೇತನರಿಗೆ ಕೆಲಸದ ರಿಯಾಯಿತಿ, ಕಾಮಗಾರಿ ಸ್ಥಳದಲ್ಲಿರುವ ಸೌಲಭ್ಯ, 2025-26ನೇ ಸಾಲಿಗೆ ಕಾಮಗಾರಿಗಳ ಬೇಡಿಕೆ ಸಲ್ಲಿಸುವ ವಿಧಾನ, ವೈಯಕ್ತಿಕ ಕಾಮಗಾರಿಗಳಾದ ದನದ ಕೊಟ್ಟಿಗೆ, ಕುರಿ ಶೆಡ್, ಬಚ್ಚಲುಗುಂಡಿ, ಕೋಳಿ ಶೆಡ್, ಎರೆಹುಳು ಘಟಕ, ತೆರೆದ ಬಾವಿ ಸೇರಿದಂತೆ ವಿವಿಧ ಸೌಲಭ್ಯಗಳ ಕುರಿತು ವಿಸ್ತೃತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಇಡಗುಂದಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನವೀರ ಕುಂಬಾರ, ಕುಂದರಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಎಂ. ಪಟಗಾರ, ಗ್ರಾ.ಪಂ. ಸದಸ್ಯೆ ರೇಣುಕಾ, ಮನರೇಗಾ ತಾಂತ್ರಿಕ ಸಂಯೋಜಕ ನಾರಾಯಣ ತಾನೋಜಿ, ತಾಂತ್ರಿಕ ಸಹಾಯಕರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಚೈತ್ರಾ, ಮಾಲತೇಶ, ಗ್ರಾಮ ಪಂಚಾಯತ್ ಸಿಬ್ಬಂದಿ, ಬಿಎಫ್‌ಟಿ, ಗ್ರಾಮ ಕಾಯಕ ಮಿತ್ರ, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.