ಕಾರವಾರ: ಜಿಲ್ಲೆಯ ಖನಿಜ ಪ್ರತಿಷ್ಠಾನ ನಿಧಿಯಲ್ಲಿನ ಮೊತ್ತದಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲೆಗಳ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನವನ್ನು ಮೀಸಲಿಡುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಲ್ಲಿ ಪ್ರಸ್ತುತ ಸಾಲಿಗೆ ಲಭ್ಯವಿರುವ ರೂ.859.40 ಲಕ್ಷ ರೂ ಗಳ ಅನುದಾನದಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗುವಂತಹ ಕ್ರಿಯಾ ಯೋಜನೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ತಯಾರಿಸುವಂತೆ ತಿಳಿಸಿದ ಸಚಿವರು, ಜಿಲ್ಲೆಯಲ್ಲಿ ಗಣಿಗಾರಿಕೆಗೆ ಒಳಪಡುವ ತಾಲೂಕುಗಳಲ್ಲಿ ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಏಜೆನ್ಸಿ ಲಿಮಿಟೆಡ್ ಅಧ್ಯಕ್ಷ ಹಾಗೂ ಕಾರವಾರ ಶಾಸಕ ಸತೀಶ್ ಸೈಲ್, ಕುಮಟಾ ಶಾಸಕ ದಿನಕರ ಶೆಟ್ಟಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ್, ಡಿ.ಎಫ್.ಓ. ರವಿಶಂಕರ್, ಉಪ ವಿಭಾಗಾಧಿಕಾರಿ ಕನಿಷ್ಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಆಶಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.