ಹಾಳದಕಟ್ಟಾ ಕಾಲೇಜಿನಲ್ಲಿ ಸಚಿವ ಮಧು ಬಂಗಾರಪ್ಪ ಮಾಹಿತಿ
ಸಿದ್ದಾಪುರ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳು ಕೋಚಿಂಗ್ ಕೇಂದ್ರಗಳಿಗಾಗಿಯೇ ಲಕ್ಷಾಂತರ ರೂ. ವ್ಯಯಿಸಬೇಕಾದ ಪರಿಸ್ಥಿತಿಯಿದೆ. ಇದನ್ನು ಮನಗಂಡು ಸಿಇಟಿ, ನೀಟ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗೆ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಉಚಿತ ಆನ್‌ಲೈನ್ ಕೋಚಿಂಗ್ ಪ್ರಾರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪಟ್ಟಣದ ಹಾಳದಕಟ್ಟಾ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಗಣಕವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದರು. ಕೇವಲ ಕೋಚಿಂಗ್‌ಗಾಗಿ ಹಣ ವ್ಯಯಿಸುವುದು ಮಧ್ಯಮ ವರ್ಗದವರಿಗೆ, ಬಡವರಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ರಾಜ್ಯದ ಎಲ್ಲಾ ಮಕ್ಕಳಿಗೆ ಅನುಕೂಲವಾಗಲೆಂದು ಸರ್ಕಾರದ ವತಿಯಿಂದ ಉಚಿತ ಆನಲೈನ್ ಕೋಚಿಂಗ್ ಪ್ರಾರಂಭಿಸಲಾಗಿದೆ ಎಂದರು. ತಂತ್ರಜ್ಞಾನ ಯುಗದಲ್ಲಿ ಗಣಕವಿಜ್ಞಾನಕ್ಕೆ ಭಾರಿ ಬೇಡಿಕೆಯಿದ್ದು, ಈ ಪ್ರಯೋಗಾಲಯಗಳನ್ನು ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಆರಂಭಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಪಿಯು ಕಾಲೇಜುಗಳಿಗೆ 800 ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ತಯಾರಿ ನಡೆದಿದ್ದು ಫೆಬ್ರವರಿಯೊಳಗೆ ನೊಟಿಫಿಕೇಶನ್ ಹೊರಡಿಸಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಸರ್ಕಾರ ಶಿಕ್ಷಣಕ್ಕೆ ಸಾಕಷ್ಟು ಉತ್ತೇಜನ ನೀಡುತ್ತಿದ್ದು, ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಹಾಳದಕಟ್ಟಾ ಕಾಲೇಜಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜಪ್ಪ ಕೆ.ಎಚ್., ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ತಾಲೂಕಾ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.ನಾಯ್ಕ, ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ, ಕಾಲೇಜಿನ ಪ್ರಾಚಾರ್ಯ ಭಾಸ್ಕರ ಹೆಗಡೆ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮುನಾವರ್ ಗುರಕಾರ್, ಲೀನಾ ಫರ್ನಾಂಡಿಸ್, ಎಸ್.ಕೆ.ನಾಯ್ಕ ಉಪಸ್ಥಿತರಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುರೇಂದ್ರ ದಪೇಧಾರ್ ಸ್ವಾಗತಿಸಿದರು. ಉಪನ್ಯಾಸಕ ರತ್ನಾಕರ ನಾಯ್ಕ ನಿರೂಪಿಸಿದರು.