ಹೊನ್ನಾವರ: ಶಿಕ್ಷಣದ ಜೊತೆ ಪ್ರತಿಯೋರ್ವರು ಕ್ರೀಡೆಯನ್ನು ಜೀವನಶೈಲಿಯಾಗಿ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯವಂತರಾಗಿರಬೇಕು ಎಂದು ಹೊನ್ನಾವರ ಉಪ ಅರಣ್ಯಸಂರಕ್ಷಣಾಧಿಕಾರಿ ಯೋಗೀಶ್ ಸಿ.ಕೆ. ಸಲಹೆ ನೀಡಿದರು.
ಪಟ್ಟಣದ ಎಸ್.ಡಿ.ಎಂ. ಕಾಲೇಜು ಮೈದಾನದಲ್ಲಿ ಎಸ್.ಡಿ.ಎಂ.ಪದವಿಪೂರ್ವ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು. ಇತ್ತೀಚಿನ ದಿನದಲ್ಲಿ ಆಹಾರ, ಗಾಳಿ ಕಲುಷಿತಗೊಂಡು ಅನಾರೊಗ್ಯಕ್ಕೆ ಒಳಗಾಗುತ್ತಿದ್ದೇವೆ. ಪ್ರತಿನಿತ್ಯ 30 ರಿಂದ 40 ನಿಮಿಷ ದೈಹಿಕ ವ್ಯಾಯಾಮ ಅಥವಾ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬಹುದು. ಕ್ರೀಡೆಯಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವುದು ಮುಖ್ಯವಾಗಿದೆ. ನುರಿತ ತರಬೇತಿದಾರರಿಂದ ತರಬೇತಿ ಪಡೆದು ರಾಜ್ಯ, ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವಂತೆ ಕರೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಎಂ.ಪಿ.ಇ. ಸೊಸೈಟಿಯ ಅಧ್ಯಕ್ಷರಾದ ಕೃಷ್ಣಮೂರ್ತಿ ಭಟ್ ಶಿವಾನಿ ಮಾತನಾಡಿ ನಮ್ಮ ಸಂಸ್ಥೆಯಲ್ಲಿ ಪಠ್ಯದ ಜೊತೆಗೆ ಪಠೈತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವಿಕೆ ಕಡ್ಡಾಯಗೊಳಿಸುತ್ತೇವೆ. ಅದರಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪೊತ್ಸಾಹಿಸುವ ಕಾರ್ಯ ಮಾಡುತ್ತಿದ್ದೇವೆ. ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಕ್ರೀಡಾಕೂಟ ಯಶ್ವಸಿಗೊಳಿಸುವಂತೆ ಮನವಿ ಮಾಡಿದರು.
ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ನಾಗರಾಜ ಕಾಮತ್, ಸಂಸ್ಥೆಯ ಕಾರ್ಯದರ್ಶಿ ಎಸ್.ಎಂ.ಭಟ್, ದೈಹಿಕ ಶಿಕ್ಷಣ ನಿರ್ದೇಶಕರಾದ ರೇಣುಕಾ ಮೇಸ್ತ, ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಭಟ್, ಕ್ರೀಡಾ ಕಾರ್ಯದರ್ಶಿ ಮಂಜುನಾಥ ನಾಯ್ಕ, ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯರಾದ ಎಂ.ಎಚ್.ಭಟ್ ಸ್ವಾಗತಿಸಿ, ವಿದ್ಯಾರ್ಥಿ ಒಕ್ಕೂಟದ ಸಲಹೆಗಾರರಾದ ನಿಜಲಿಂಗಪ್ಪ ಎಚ್, ವಂದಿಸಿದರು. ಉಪನ್ಯಾಸಕರಾದ ಎಂ.ಎನ್.ಅಡಿಗುಂಡಿ ಕಾರ್ಯಕ್ರಮ ನಿರ್ವಹಿಸಿದರು.