ಕಾರವಾರ: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಇನ್ನೂ 2 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ರಾಮನಗರ, ತುಮಕೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಮುಂಗಾರು ಅಂತ್ಯ ನಿಧಾನವಾಗಲಿದ್ದು, ಸೆಪ್ಟೆಂಬರ್ ತಿಂಗಳ ನಂತರವೂ ದೇಶದ ಹಲವೆಡೆ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.