ಹೊನ್ನಾವರ : ತಾಲೂಕಿನ ಆರೊಳ್ಳಿಯ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ ೬೯ರಲ್ಲಿ ಗುರುವಾರ ಮಧ್ಯರಾತ್ರಿ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ಪ್ರವಾಸದ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಅಡುಗೆಯವರು, ಬಸ್ ಕ್ಲೀನರ್, ಚಾಲಕ ಸೇರಿದಂತೆ ೩೩ ಜನರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ನಾಲ್ಕು ಜನರನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದರಲ್ಲಿ ಮೂವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಗೋಕರ್ಣ ಪ್ರವಾಸ ಮುಗಿಸಿ ಊರಿಗೆ ಮರಳಿ ಹೋಗುತ್ತಿರುವಾಗ ಆರೊಳ್ಳಿ ತಿರುವಿನಲ್ಲಿ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿತು. ಬಸ್ಸಿನಲ್ಲಿದ್ದವರು ಚಿಕ್ಕಪುಟ್ಟ ಗಾಯಗೊಂಡಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ಉಳಿದ ವಿದ್ಯಾರ್ಥಿಗಳಿಗೆ ಪಟ್ಟಣದ ಪ್ರಭಾತನಗರದ ಪ್ರೌಢಶಾಲೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಿಕೊಟ್ಟರು.
ಕ್ಷೇತ್ರಶಿಕ್ಷಣಾಧಿಕಾರಿ, ಉಪತಹಸೀಲ್ದಾರರು, ಗ್ರಾಮ ಆಡಳಿತ ಅಧಿಕಾರಿಗಳು, ಆಸ್ಪತ್ರೆಯ ವೈದ್ಯರು ಸಹಕರಿಸಿದ್ದಾರೆ.
ಘಟನೆಯ ಕುರಿತು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕ ಭಾನುಪ್ರಕಾಶ ಚಿಕ್ಕವೆಂಕಟಯ್ಯ ಹೊನ್ನಾವರ ಪೊಲೀಸ್ ಠಾಣೆಯಲಿದೂರು ನೀಡಿದ್ದು, ಪಿ.ಎಸ್.ಐ ಮಮತಾ ಶಂಕರ ನಾಯ್ಕ ತನಿಖೆ ಕೈಗೊಂಡಿದ್ದಾರೆ.
ಸಚಿವ ಮಂಕಾಳ್ ವೈದ್ಯ ಭೇಟಿ :
ಬಸ್ ಪಲ್ಟಿಯಾಗಿ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ವಿದ್ಯಾರ್ಥಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ಎಸ್. ವೈದ್ಯ ಶುಕ್ರವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ನಂತರ ಇನ್ನುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಂಗಿದ್ದ ಪ್ರಭಾತ ನಗರದ ಪ್ರೌಢ ಶಾಲೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಶಿಕ್ಷಕರಲ್ಲಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ.