ಕಾರವಾರ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗೆ ಡಿ 29 ನಡೆಯುವ ಮರು ಪರೀಕ್ಷೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅವ್ಯವಹಾರ ಮತ್ತು ಲೋಪದೋಷಗಳಾಗದಂತೆ ಮುನ್ನೆಚ್ಚರಿಕೆಯಿಂದ ಕಾರ್ಯ ನಿರ್ವಹಿಸುವಂತೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜೀದ್ ಅಹ್ಮದ್ ಮುಲ್ಲಾ ನಿರ್ದೇಶನ ನೀಡಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಮರು ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ 4 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1470 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ಪಾರದರ್ಶಕ ಮತ್ತು ಸುವ್ಯವಸ್ಥಿತವಾಗಿ ನಡೆಯುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ ಅವರು, ಮರು ಪರೀಕ್ಷೆ ನಡೆಯುವ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗವು ಹೊರಡಿಸಿರುವ ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಮತ್ತು ಜಾಮರ್ ಅಳವಡಿಸಿ, ಅವುಗಳು ಸಮಪರ್ಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವಂತೆ ತಿಳಿಸಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಪರೀಕ್ಷಾ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ಮತ್ತು ಪರೀಕ್ಷಾ ದಿನದಂದು ಬಸ್‌ಗಳ ಸಂಚಾರವು ಸಮರ್ಪಕವಾಗಿ ಕಾರ್ಯನಿರ್ವಸಲು ಕ್ರಮಕೈಗೊಳ್ಳುವಂತೆ ತಿಳಿಸಿದ ಅವರು, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ತಲುಪಿಸುವ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ತಮಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಗೌಪ್ಯತೆಯನ್ನು ಅರಿತು ಪರೀಕ್ಷಾ ಪಾವಿತ್ರö್ಯತೆಯನ್ನು ಕಾಪಾಡಬೇಕು ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಉಮೇಶ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದೇರ್ಶಕಿ ಲತಾ ನಾಯಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸಪೆಕ್ಟರ್ ರಮೇಶ ಹೂಗಾರ, ಶಿಕ್ಷಣಾಧಿಕಾರಿ ನಾಗರಾಜ ಗೌಡ, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಮಾರ್ಗಾಧಿಕಾರಿಗಳು ಮತ್ತಿತರರು ಇದ್ದರು.