ಶಿರಸಿ: ಇಲ್ಲಿನ ರಾಯಪ್ಪ ಹುಲೇಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಕೋ ಕೇರ್ ಸಂಸ್ಥೆಯ ವತಿಯಿಂದ “ಶಿಕ್ಷಣ ಬಂಧು ಯೋಜನೆ”ಯಡಿ ಆರೋಗ್ಯ ಶಿಕ್ಷಣ ಮತ್ತು ಔಷಧಿಗಳ ಬಗ್ಗೆ ಉಪನ್ಯಾಸ ಹಾಗೂ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗಿಡಕ್ಕೆ ನೀರುಣಿಸುವ ಮೂಲಕ ಉದ್ಘಾಟನೆಯನ್ನು ಎಸ್.ಡಿ.ಎಮ್.ಸಿ. ಅಧ್ಯಕ್ಷ ಸೈಯ್ಯದ್ ಇಬ್ರಾಹಿಂ ಶೇಖ್ ನೆರವೇರಿಸಿ ಮಾತನಾಡಿ ಸರ್ಕಾರಿ ಶಾಲೆಗಳಲ್ಲಿ ಸಂಸ್ಥೆಯು ಹಮ್ಮಿಕೊಳ್ಳುತ್ತಿರುವ ಕಾರ್ಯಕ್ರಮದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ರಮೇಶ ಬಿ.ನಾಯ್ಕ್, ಪರಿಸರ, ಆರೋಗ್ಯ, ಸ್ವಚ್ಛತೆ ಕುರಿತು ಮಕ್ಕಳೊಂದಿಗೆ ಸಂವಾದ ನಡೆಸಿದರು. ಅತಿಥಿಗಳಾದ ಸಿಆರ್‌ಪಿ ಶ್ರೀಮತಿ ಪ್ರತಿಮಾ ಕೋಮಾರ ಮಾತನಾಡಿ ಸಂಸ್ಥೆಯು ಶಿಕ್ಷಣ ಇಲಾಖೆ ಜೊತೆ ಕೈಜೋಡಿಸಿರುವುದರಿಂದ ಮಕ್ಕಳಿಗೆ ಆರೋಗ್ಯದ ಬಗ್ಗೆ ಉಪಯುಕ್ತ ಮಾಹಿತಿ ಲಭ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಕೋ ಕೇರ್ ಸಂಸ್ಥೆಯ ಅಧ್ಯಕ್ಷ ಸುನೀಲ ಭೋವಿ ವಹಿಸಿ ಸಂಸ್ಥೆಯ ಧ್ಯೇಯೋದ್ದೇಶದ ಕುರಿತು ಮಾತನಾಡಿದರು. ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ (ರಿ.), ಜಿಲ್ಲಾ ಶಾಖೆ: ಉತ್ತರ ಕನ್ನಡದ ಅಧ್ಯಕ್ಷರಾದ ಮಹೇಶ ಡಿ. ನಾಯಕ್ ಸರ್ಕಾರಿ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳು, ಆರೋಗ್ಯ ಶಿಕ್ಷಣ ಹಾಗೂ ಔಷಧಗಳ ಬಗ್ಗೆ ಉಪನ್ಯಾಸ ನೀಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಮುಕ್ತಾ ಭಜಂತ್ರಿ ಇಕೋ ಕೇರ್ ಸಂಸ್ಥೆಯು ಹಮ್ಮಿಕೊಳ್ಳುತ್ತಿರುವ ಇಂತಹ ಆರೋಗ್ಯ ಜಾಗೃತಿ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಉತ್ತಮ ಪರಿಣಾಮ ಬೀರುತ್ತದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ನಂತರ ಶಾಲೆಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ವಕೀಲರಾದ ಜಗದೀಶ ಡಿ.ನಾಯ್ಕ್, ಶಿಕ್ಷಕರು, ಮಕ್ಕಳು ಹಾಗೂ ಪಾಲಕರು ಪಾಲ್ಗೊಂಡಿದ್ದರು. ಸಂಸ್ಥೆಯ ಸದಸ್ಯರಾದ ರಾಜೇಶ್ ವೆರ್ಣೇಕರ್ ಪ್ರಥಮ ಚಿಕಿತ್ಸೆ ಪೆಟ್ಟಿಗೆಯಲ್ಲಿರುವ ಔಷಧಗಳ ಕುರಿತು ಮಾಹಿತಿ ನೀಡಿದರು. ಪ್ರಧಾನ ಕಾರ್ಯದರ್ಶಿ ರಮೇಶ ಬಿ. ನಾಯ್ಕ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಿಕ್ಷಕರಾದ ಬಿ.ಎಮ್.ಗೌಡ ವಂದನಾರ್ಪಣೆ ಮಾಡಿದರು.