ಕಾರವಾರ: ರಾಜ್ಯ ಮಕ್ಕಳ ರಕ್ಷಣಾ ನೀತಿಯ ಅನುಷ್ಠಾನ ಕುರಿತಂತೆ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಮಕ್ಕಳ ಸುರಕ್ಷತೆಯ ಬಗ್ಗೆ ವಿಶೇಷ ಕಾಳಜಿ ವಹಿಸಿ, ತಮ್ಮ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುವುದರ ಮೂಲಕ ಜಿಲ್ಲೆಯನ್ನು, ಮಕ್ಕಳ ರಕ್ಷಣೆಯಲ್ಲಿ ಇಡೀ ರಾಜ್ಯದಲ್ಲೇ ಮಾದರಿ ಜಿಲ್ಲೆಯನ್ನಾಗಿ ರೂಪಿಸಬೇಕು ಎಂದು ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು ಮತ್ತು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ತಾಲ್ಲೂಕು ಮಟ್ಟದ ಮಕ್ಕಳ ರಕ್ಷಣಾ ಸಮಿತಿಯ ಬಲವರ್ಧನೆಗಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಜಂಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಸಂಪೂರ್ಣ ಸುರಕ್ಷತೆಯ ಕುರಿತಂತೆ ಗಮನ ಹರಿಸಬೇಕು, ತಮ್ಮ ತಾಲೂಕು ವ್ಯಾಪ್ತಿಯಲ್ಲಿ ಎಲ್ಲಾ ಶಾಲೆಗಳು ಮತ್ತು ವಸತಿ ನಿಲಯಗಳಿಗೆ ಆಗಾಗ್ಗೆ ಭೇಟಿ ನೀಡಿ ಮಕ್ಕಳ ರಕ್ಷಣೆಗಾಗಿ ಆಯೋಗ ಮತ್ತು ಸರಕಾರ ಸೂಚಿಸಿರುವ ನಿಯಮಗಳು ಸಂಪೂರ್ಣ ಅನುಷ್ಠಾನವಾಗಿರುವ ಕುರಿತಂತೆ ಪರಿಶೀಲಿಸಿ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದರು.
ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಮಕ್ಕಳ ಶಿಕ್ಷಣ ಕಾರ್ಯಪಡೆ, ಮಹಿಳೆ ಮತ್ತು ಮಕ್ಕಳ ಕಾವಲು ಸಮಿತಿ ರಚನೆಯು ಶೇ.100 ರಷ್ಟು ಅನುಷ್ಠಾನಗೊಂಡು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು. ಪೊಲೀಸ್ ಠಾಣೆಗಳಲ್ಲಿ ತೆರೆದಮನೆ ಕಾರ್ಯಕ್ರಮಗಳು ನಡೆಯಬೇಕು. ಶಾಲೆ ಮತ್ತು ಹಾಸ್ಟೆಲ್ಗಳ ವ್ಯಾಪ್ತಿಯಲ್ಲಿ ಮಕ್ಕಳಿಗೆ ಅತ್ಯಂತ ಸುರಕ್ಷಿತ ವಾತಾವರಣ ನಿರ್ಮಿಸಬೇಕು, ಮಕ್ಕಳ ಸಹಾಯವಾಣಿ ಸಂಖ್ಯೆ 1098 ನ್ನು ಎಲ್ಲಾ ಸರಕಾರಿ ಕಟ್ಟಡಗಳಲ್ಲಿ ಶಾಶ್ವತ ಫಲಕದಲ್ಲಿ ಆಳವಡಿಸಬೇಕು, ವಸತಿ ಶಾಲೆಗಳು ಮತ್ತು ಖಾಸಗಿ ಕೋಚಿಂಗ್ ಸೆಂಟರ್ಗಳಲ್ಲಿ ಕೂಡಾ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲಿಸಬೇಕು ಎಂದರು.
ಶಾಲೆ ಮತ್ತು ಹಾಸ್ಟೆಲ್ಗಳ ಆವರಣದಲ್ಲಿ ವಿದ್ಯುತ್ ಕಂಬ ಅಳವಡಿಕೆ, ವಿದ್ಯುತ್ ತಂತಿ ಹಾದು ಹೋಗಿರುವ ಮತ್ತು ಟ್ರಾನ್ಸ್ಫಾರ್ಮರ್ ಅಳವಡಿಸಿರುವುದು ಕಂಡು ಬಂದಲ್ಲಿ ಕೂಡಲೇ ಅವುಗಳನ್ನು ಅಲ್ಲಿಂದ ತೆರವುಗೊಳಿಸಬೇಕು, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಮಕ್ಕಳ ಸ್ನೇಹಿ ಕಾರ್ಯಾಚರಣೆ ನಡೆಸಬೇಕು ಮತ್ತು ಉತ್ತಮ ವಾತಾವರಣ ನಿರ್ಮಿಸಬೇಕು. ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ನಿಯಮಾನುಸಾರವೇ ನಡೆಸಬೇಕು ಮತ್ತು ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ತಮ್ಮ ಗ್ರಾಮದ ವ್ಯಾಪ್ತಿಯಲ್ಲಿರುವ ಎಲ್ಲಾ ಮಕ್ಕಳ ಸಮಗ್ರ ಮಾಹಿತಿಯ ದಾಖಲೆ ಇರಬೇಕು ಎಂದರು.
ರಾಜ್ಯಾದ್ಯಂತ ಫೆಬ್ರವರಿ ಅಂತ್ಯದೊಳಗೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016 ನ್ನು ಸಂರ್ಪೂವಾಗಿ ಅನುಷ್ಠಾನಗೊಳಿಸಬೇಕಾಗಿದ್ದು, ಈ ಕುರಿತಂತೆ ಎಲ್ಲಾ ಅಧಿಕಾರಿಗಳು ತಮಗೆ ವಹಿಸಲಾಗಿರುವ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿರುವ ಕುರಿತಂತೆ ದೃಢೀಕರಣವನ್ನು ನೀಡಬೇಕು. ಎಲ್ಲಾ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯೊನ್ಮುಖರಾಗುವುದರ ಜೊತೆಗೆ, ಮಕ್ಕಳ ರಕ್ಷಣೆಯಲ್ಲಿ ಹೆಚ್ಚಿನ ಕಾಳಜಿ ವಹಿಸಿ, ಇಚ್ಚಾಶಕ್ತಿಯ ಮೂಲಕ ಕಾರ್ಯನಿರ್ವಹಿಸಿದ್ದಲ್ಲಿ, ಮಕ್ಕಳ ಸಂರಕ್ಷಣೆಯಲ್ಲಿ ಪರಿಣಾಮಕಾರಿಯಾದ ಬದಲಾವಣೆಗಳನ್ನು ತರಲು ಸಾಧ್ಯವಿದ್ದು, ಇದಕ್ಕಾಗಿ ಆಯೋಗದಿಂದ ಎಲ್ಲಾ ರೀತಿಯ ಸಂಪೂರ್ಣ ಸಹಕಾರವನ್ನು ನೀಡಲಾಗುವುದು ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿರೂಪಾಕ್ಷ ಗೌಡ ಪಾಟೀಲ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಾಳ್ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಜರಿದ್ದರು.