ಕಾರವಾರ: ಗಣಕಯಂತ್ರ ಶಿಕ್ಷಣ ಪರೀಕ್ಷೆಯು ಫೆ.3 ರಿಂದ ಫೆ.10 ರವರೆಗೆ ಡಯಟ್ ಕುಮಟಾ ಡಯಟ್ ಶಿರಸಿ, ನಿಲೇಕಣಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆಯಲಿದ್ದು, ಈ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆಗಳು ಅಥವಾ ಶಾಂತತಾ ಭಂಗ ಆಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ಸದರಿ ವ್ಯಾಪ್ತಿಯಲ್ಲಿ ಭಾರತೀಯ ಸುರಕ್ಷಾ ಸಂಹಿತೆ ಕಾಯ್ದೆ 2023 ಕಲಂ 163 ರಂತೆ ಜಿಲ್ಲಾ ದಂಡಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ನಿಷೇಧಾಜ್ಞೆಯನ್ನು ಹೊರಡಿಸಿರುತ್ತಾರೆ.
ಸದರಿ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಇಲೆಕ್ಟ್ರಾನಿಕ್ಸ್ ವಸ್ತುಗಳು ಅಂದರೆ, ಮೊಬೈಲ್ ಫೋನಗಳು, ಸ್ಮಾರ್ಟ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್ ಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ದಂಡಾಧಿಕಾರಿ ಪ್ರಕಟಣೆ ತಿಳಿಸಿದೆ.