ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಹಾಗೂ ಧಾರವಾಡದ ವಿಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಫೆಬ್ರವರಿ 9ರ ಭಾನುವಾರದಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ 12 ವರ್ಷದೊಳಗಿನ ಚಿಕ್ಕ ಮಕ್ಕಳ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಔದ್ಯೋಗಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ ಹೇಳಿದರು.
ಅವರು ಬುಧವಾರ ಕಾಗದ ಕಾರ್ಖಾನೆಯ ಸ್ಪೋರ್ಟ್ಸ್ & ವೆಲ್ಫೇರ್ ವಿಭಾಗದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದರು. ಖ್ಯಾತ ಮಕ್ಕಳ ತಜ್ಞರಾದ ಡಾ. ರಾಜನ್ ದೇಶಪಾಂಡೆ ನೇತೃತ್ವದಲ್ಲಿ ನಡೆಯಲಿರುವ ಈ ಶಿಬಿರದಲ್ಲಿ ಒಟ್ಟು 12 ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ದಾಂಡೇಲಿ ಹಾಗೂ ದಾಂಡೇಲಿಯ ಸುತ್ತಮುತ್ತಲ ಸಾರ್ವಜನಿಕರಾಗಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸುವವರು ಈ ಶಿಬಿರ ನಡೆಯುವ ದಿನದಂದು ಬೆಳಿಗ್ಗೆ 8 ಗಂಟೆಗೆ ರಂಗನಾಥ ಸಭಾಭವನದ ಆವರಣದಲ್ಲಿ ತೆರೆಯಲಾಗಿರುವ ಕೌಂಟರ್‌ನಲ್ಲಿ ತಮ್ಮ ತಮ್ಮ ಹೆಸರನ್ನು ನೋಂದಾಯಿಸಬೇಕು. ನಗರದ ಸುತ್ತಮುತ್ತಲ ಗ್ರಾಮೀಣ ಭಾಗದ ಜನರಿಗೆ ವಾಹನದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಊಟ, ಉಪಹಾರದ ಜೊತೆಗೆ ಉಚಿತವಾಗಿ ಔಷಧಿಗಳನ್ನು ನೀಡಲಾಗುತ್ತದೆ. ಈ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ರಾಜೇಶ ತಿವಾರಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಜೆ.ಆರ್, ನಗರ ಸಭಾ ಸದಸ್ಯರಾದ ಮೋಹನ ಹಲವಾಯಿ ಉಪಸ್ಥಿತರಿದ್ದರು.