ದಾಂಡೇಲಿ : ನಗರದ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಹಾಗೂ ಧಾರವಾಡದ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ನಗರದ ಕಾಗದ ಕಾರ್ಖಾನೆಯ ಔದ್ಯೋಗಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಆಯೋಜಿಸಲಾಗಿದ್ದ 12 ವರ್ಷದೊಳಗಿನ ಚಿಕ್ಕ ಮಕ್ಕಳ ಬೃಹತ್ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿತು.
ಶಿಬಿರವನ್ನು ಖ್ಯಾತ ಚಿಕ್ಕ ಮಕ್ಕಳ ತಜ್ಞರಾದ ಧಾರವಾಡದ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಡಾ.ರಾಜನ್ ದೇಶಪಾಂಡೆ ಉದ್ಘಾಟಿಸಿ, ಮಕ್ಕಳು ಭವಿಷ್ಯದ ರಾಷ್ಟ್ರದ ಆಸ್ತಿ. ಮಕ್ಕಳ ಆರೋಗ್ಯ ಸಂರಕ್ಷಣೆಯಲ್ಲಿ ಪಾಲಕರ ಪಾತ್ರ ಮಹತ್ವಪೂರ್ಣವಾಗಿದೆ. ಶಿಬಿರದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಡೆದುಕೊಳ್ಳುವಂತೆ ಕರೆ ನೀಡಿದರು.
ಶಿಬಿರದ ಅಧ್ಯಕ್ಷತೆಯನ್ನು ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ರಾಜೇಂದ್ರ ಜೈನ್ ಅವರು ವಹಿಸಿ ಮಾತನಾಡುತ್ತಾ, ಸಾರ್ವಜನಿಕರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಈ ಶಿಬಿರವನ್ನು ಆಯೋಜಿಸಲಾಗಿದೆ. ಪ್ರತಿವರ್ಷವೂ ಈ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಮಕ್ಕಳ ಆರೋಗ್ಯ ರಕ್ಷಣೆಯ ಕುರಿತಂತೆ ಪಾಲಕರು ಹೆಚ್ಚಿನ ಕಾಳಜಿಯನ್ನು ವಹಿಸಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಗಳಾಗಿ ಡಾ.ಕವನ್ ದೇಶಪಾಂಡೆ, ದಾಂಡೇಲಿಯ ವೈದ್ಯರುಗಳಾದ ಡಾ.ಎಸ್.ಎಲ್.ಕರ್ಕಿ, ಡಾ.ಮುಕುಂದ ಕಾಮತ್, ಡಾ.ಶೇಖರ ಹಂಚಿನಾಳಮಠ ಹಾಗೂ ಧಾರವಾಡದ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ವೈದ್ಯರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವೆಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ವಿಭಾಗದ ಉಪ ಪ್ರಧಾನ ವ್ಯವಸ್ಥಾಪಕರಾದ ರಾಘವೇಂದ್ರ ಜೆ.ಆರ್, ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ, ಔದ್ಯೋಗಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಜ್ಞಾನದೀಪ ಗಾಂವಕರ, ಡಾ.ಸುಮಿತ್ ಅಗ್ನಿಹೋತ್ರಿ ಹಾಗೂ ಕಾಗದ ಕಾರ್ಖಾನೆ ಅಧಿಕಾರಿಗಳು ಮತ್ತು ಔದ್ಯೋಗಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಖ್ಯಾತ ಮಕ್ಕಳ ತಜ್ಞರಾದ ಡಾ. ರಾಜನ್ ದೇಶಪಾಂಡೆ ಅವರ ನೇತೃತ್ವದಲ್ಲಿ ನಡೆದ ಈ ಶಿಬಿರದಲ್ಲಿ ಒಟ್ಟು 12 ತಜ್ಞ ವೈದ್ಯರು ಭಾಗವಹಿಸಿದ್ದರು. ಒಟ್ಟು 522 ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.