ಕಾರವಾರ: ಜಿಲ್ಲೆಯಲ್ಲಿ ಮಂಗನ ಖಾಯಿಲೆ ಹರಡದಂತೆ ಈಗಿನಿಂದಲೇ ಗರಿಷ್ಠ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸೂಚನೆ ನೀಡಿದರು.
ಅವರು ಸೋಮವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ , ಜಿಲ್ಲೆಯಲ್ಲಿ ಮಂಗನ ಖಾಯಿಲೆ ನಿಯಂತ್ರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಂಗನ ಖಾಯಲೆ ಕಾಣಿಸಿಕೊಳ್ಳಬಹುದಾದ ತಾಲೂಕು ಮತ್ತು ಗ್ರಾಮಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿ ಆ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ತಿಳಿಸಿದ ಅವರು, ಆ ಎಲ್ಲಾ ಗ್ರಾಮಗಳಲ್ಲಿ ಮನೆ ಮನೆಗಳಿಗೆ ಡೆಪೋ ತೈಲವನ್ನು ವಿತರಿಸುವಂತೆ ಮತು ಅದನ್ನು ಬಳಸುವ ವಿಧಾನದ ಬಗ್ಗೆ ಅರಿವು ಮೂಡಿಸಬೇಕು ತಿಳಿಸಿದರು.
ಜನವರಿಯಿಂದ ಇದುವರೆಗೆ ಜಿಲ್ಲೆಯಲ್ಲಿ 1711 ಮಾನವ ಸ್ಯಾಂಪಲ್ ಗಳನ್ನು ಸಂಗ್ರಹಿಸಿದ್ದು ಅದರಲ್ಲಿ ಒಂದು ಪ್ರಕರಣದಲ್ಲಿ ಮಾತ್ರ ಪಾಸಿಟಿವ್ ಬಂದಿದ್ದು ಪ್ರಸ್ತುತ ಅವರು ಕೂಡ ಗುಣಮುಖರಾಗಿದ್ದಾರೆ, ವಿವಿಧ ಕಾರಣಗಳಿಂದ 18 ಮಂಗಗಳು ಸಾವನ್ನಪ್ಪಿವೆ ಎಂದರು.
ಸಾರ್ವಜನಿಕರು ಗ್ರಾಮ ಪಂಚಾಯತ್ ಮತ್ತು ಅರಣ್ಯ ವ್ಯಾಪ್ತಿಯಲ್ಲಿ ಮಂಗಗಳು ಸಾವನ್ನಪ್ಪದರೆ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು , ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಂಗನ ಖಾಯಿಲೆಗೆ ಚಿಕಿತ್ಸೆ ನೀಡಲು ಅಗತ್ಯವಿರುವ ಔಷಧಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ದಾಸ್ತಾನು ಇಡುವಂತೆ ಮತ್ತು ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಯನ್ನು ಮೀಸಲಿಡುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಮೋಹನ್ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಅರ್ಚನಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಕ್ಯಾ. ಡಾ.ರಮೇಶ್ ರಾವ್, ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ.ನಟರಾಜ್ , ಕ್ರಿಮ್ಸ್ ನ ವೈದ್ಯರು ಮತ್ತು ವೀಡಿಯೋ ಕಾನ್ಫ್ರೆನ್ಸ್ ಮೂಲಕ ಎಲ್ಲಾ ತಾಲೂಕುಗಳ ತಹಸೀಲ್ದಾರ್ ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.