ದಾಂಡೇಲಿ : ನಗರದ ಅಂಬೇವಾಡಿಯಲ್ಲಿ ಜಿ+2 ಆಶ್ರಯ ಮನೆಗಳ ನಿರ್ಮಾಣ ಕಾರ್ಯವು ಗುತ್ತಿಗೆದಾರರಿಂದ ವಿಳಂಬವಾಗಿದೆ. ಆಶ್ರಯ ಮನೆಗಳ ನಿರ್ಮಾಣ ಕಾರ್ಯವನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕೆಂದು ಈಗಾಗಲೆ ಕರ್ನಾಟಕ ಗೃಹ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಹೇಳಿದರು.
ಅವರು ಶನಿವಾರ ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡುತ್ತಾ, 1106 ಆಶ್ರಯ ಮನೆಗಳನ್ನು ಮಂಜೂರು ಮಾಡಿ ವಿತರಣೆಯನ್ನು ಕೂಡ ಮಾಡಲಾಗಿದ್ದು, ಇದರಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಂಡ 240 ಮನೆಗಳನ್ನು ಆಯ್ದ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ. ಈ ಹಿಂದೆಯೆ ಎಲ್ಲ ಮನೆಗಳ ನಿರ್ಮಾಣ ಕಾರ್ಯ ಮುಗಿದು ವಿತರಣೆಯಾಗಬೇಕಿತ್ತು. ಆದರೆ ಗುತ್ತಿಗೆದಾರನ ವಿಳಂಬದಿಂದಾಗಿ ಈ ಸಮಸ್ಯೆ ಉದ್ಭವವಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಕರ್ನಾಟಕ ಗೃಹ ಮಂಡಳಿಯ ಅಧಿಕಾರಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರ ಜೊತೆ ಚರ್ಚಿಸಲಾಗಿದೆ. ಕರ್ನಾಟಕ ಗೃಹ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಮೊನ್ನೆ ಬೆಂಗಳೂರಿನ ಕರ್ನಾಟಕ ಗೃಹ ಮಂಡಳಿಯ ಕಾರ್ಯಾಲಯದಲ್ಲಿ ಇಲಾಖೆಯ ಎಲ್ಲಾ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದ್ದಾರೆ. ಈ ಸಭೆಯಲ್ಲಿ ನಗರಸಭೆಯ ಪೌರಾಯುಕ್ತರು ಕೂಡ ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಆಶ್ರಯ ಮನೆಗಳ ನಿರ್ಮಾಣ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚೆಯಾಗಿದ್ದು, ಅದರ ಭಾಗವಾಗಿ ಬಹುತೇಕ ಅಂತಿಮ ಹಂತದಲ್ಲಿರುವ 84 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ, ತ್ವರಿತವಾಗಿ ಫಲಾನುಭವಿಗಳಿಗೆ ನೀಡಲು ಸಭೆಯಲ್ಲಿ ಚರ್ಚೆಯಾಗಿದ್ದು, ಆ ಪ್ರಕಾರವಾಗಿ 84 ಮನೆಗಳ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಇಂದೇ ಮತ್ತೆ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ ಎಂದರು. ಆದಷ್ಟು ಶೀಘ್ರ ಈ ಮನೆಗಳ ಹಂಚಿಕೆಗೆ ಅಗತ್ಯ ಕ್ರಮವನ್ನು ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದ್ದೇನೆ ಎಂದರು. ಆಶ್ರಯ ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ನಿಟ್ಟಿನಲ್ಲಿ ನಾನು ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆಯನ್ನು ನೀಡಿದ್ದೇನೆ ಎಂದರು.