Slide
Slide
Slide
previous arrow
next arrow

ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ;ಸಚಿವ ವೈದ್ಯ

300x250 AD

ಕಾರವಾರ:  ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವ ಹಾನಿ ಆಗದಂತೆ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು.

ಅವರು ಗುರುವಾರ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಪೂರ್ವ ಸಿದ್ದತೆ ಕುರಿತು ಕೈಗೊಂಡಿರುವ ಕ್ರಮಗಳ ಕುರಿತು ವರ್ಚುಚಲ್ ಮೂಲಕ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿನ ಶಾಲೆಗಳು ಮತ್ತು ಅಂಗನವಾಡಿ ಕಟ್ಟಡಗಳ ಬಳಿ ಇರುವ ಅಪಾಯಕಾರಿ ಮರಗಳನ್ನು ತಕ್ಷಣ ತೆರವುಗೊಳಿಸಬೇಕು, ಈ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದರೆ ಪರ್ಯಾಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು, ಅರಣ್ಯ ಇಲಾಖೆವತಿಯಿಂದ ಅಪಾಯಕಾರಿ ಮರಗಳನ್ನು ತಕ್ಷಣವೇ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು.
            ಮಳೆಯಿಂದ ಹಾನಿ ಸಂಭವಿಸಿದ್ದಲ್ಲಿ ಸಂಬಂಧಪಟ್ಟವರಿಗೆ ತಕ್ಷಣವೇ ಪರಿಹಾರವನ್ನು ವಿತರಿಸಬೇಕು, ಸಂತ್ರಸ್ತರಿಗೆ ಪರಿಹಾರ ವಿತರಣೆ ಸಂದರ್ಭದಲ್ಲಿ ಅಂದಾಜು ಮಾಡುವ ನಷ್ಠವನ್ನು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಅವರಿಗೆ ಗರಿಷ್ಠ ಮೊತ್ತದ ಪರಿಹಾರ ವಿತರಣೆ ಮಾಡಬೇಕು. ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಪರಿಹಾರ ವಿತರಣೆಗೆ ಯಾವುದೇ ಹಣಕಾಸಿನ ಕೊರತೆ ಇಲ್ಲವಾಗಿದ್ದು ಎಲ್ಲಾ ತಾಲೂಕುಗಳ ತಹಸೀಲ್ದಾರ್ ಗಳ ಖಾತೆಯಲ್ಲಿ ಸರಾಸರಿ 60 ರಿಂದ 70 ಲಕ್ಷ ರೂ ಗಳ ಅನುದಾನವಿದ್ದು, ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಕೂಡಲೇ ಬಿಡುಗಡೆಗೊಳಿಸಲಾಗುವುದು ಎಂದರು.
ಈ ಹಿಂದಿನ ಬಾರಿ ನೌಕಾನೆಲೆ ಪ್ರದೇಶದಲ್ಲಿನ ಜನಸವತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಪ್ರಸ್ತುತ ಈ ಪ್ರದೇಶಗಳಲ್ಲಿ ಈ ಬಾರಿ ಯಾವುದೇ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು, ರಸ್ತೆಗಳ ಪಕ್ಕದಲ್ಲಿನ ಚರಂಡಿಗಳಲ್ಲಿ ಡ್ರಜ್ಜಿಂಗ್ ಮಾಡುವ ಮೂಲಕ ಮಳೆ ನೀರು ರಸ್ತೆಯಲ್ಲಿ ನಿಲ್ಲದಂತೆ ಎಚ್ಚರವಹಿಸಬೇಕು, ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿಯೂ ಕೂಡಾ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗದAತೆ ಎಚ್ಚರವಹಿಸಬೇಕು ಎಂದರು.
 ಈಗಾಗಲೇ ಗುರುತಿಸಲಾಗಿರುವ ಗುಡ್ಡಕುಸಿತ ಪ್ರದೇಶಗಳಲ್ಲಿ ವಾಸವಾಗಿರುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕಾರಣದಿಂದ ಅಪಘಾತ ಸಂಭವಿಸಿ ಅನಾಹುತವಾದಲ್ಲಿ , ಕಾಮಗಾರಿ ನಿರ್ವಹಿಸುವ ಸಂಸ್ಥೆಯ ಅಧಿಕಾರಿಗಳ ಹೆಸರನ್ನು ನಮೂದಿಸಿ ಎಫ್.ಐ.ಆರ್ ದಾಖಲಿಸುವಂತೆ ಸೂಚಿಸಿದರು.
ಎಲ್ಲಾ ತಾಲೂಕುಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿ ಹಾನಿ ಸಂಭವಿಸುವ ಪ್ರದೇಶಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿಕೊಳ್ಳಬೇಕು, ಅಲ್ಲಿನ ಜನರಿಗೆ ಅಗತ್ಯ ಮುನ್ಸೂಚನೆಗಳನ್ನು ನೀಡುವುದರ ಜೊತೆಗೆ ಸಮೀಪದಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಬೇಕು, ಕಾಳಜಿ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಯಾವುದೇ ಕೊರತೆಯಾಗದಂತೆ ಅಗತ್ಯ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಎಲ್ಲಾ ತಾಲೂಕುಗಳಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಂ ಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ನಿರ್ದೇಶನ ನೀಡಿದರು.
ಜಲಾಶಯಗಳಿಂದ ನೀರು ಹೊರಬಿಡುವ ಸಮಯದಲ್ಲಿ ಸಮುದ್ರದ ಉಬ್ಬರ ಮತ್ತು ಇಳಿತವನ್ನು ತಿಳಿದುಕೊಂಡು ನೀರು ಬಿಡುಗಡೆ ಮಾಡಬೇಕು, ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆ ಹೊಂದಿರಬೇಕು, ಸಹಕಾರದಿಂದ ಒಟ್ಟಾಗಿ ಕಾರ್ಯನಿರ್ವಹಿಸುವುದರ ಮೂಲಕ ಜಿಲ್ಲೆಯಲ್ಲಿ ಮಾನ್ಸೂನ್ ವೇಳೆಯಲ್ಲಿ ಜಿಲ್ಲೆಯ ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅಗತ್ಯವಿರುವ ನೆರವು ಒದಗಿಸಬೇಕು ಎಂದರು.
ಜಿಲ್ಲಾಧಿಕರಿ ಕೆ.ಲಕ್ಷ್ಮಿಪ್ರಿಯ ಮಾತನಾಡಿ, ಜಿಲ್ಲಾಡಳಿದಿಂದ ಈ ಬಾರಿಯ ಮಾನ್ಸೂನ್ ವಿಪತ್ತು ಎದುರಿಸುವ ಕುರಿತಂತೆ ಈಗಾಗಲೇ ನಿರಂತರವಾಗಿ ಸಭೆಗಳನ್ನು ನಡೆಸಿ ಎಲ್ಲಾ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಪ್ರಸ್ತುತ ಮಳೆಯಿಂದ ಪ್ರಾಣಹಾನಿಯಾದ ಒಬ್ಬರಿಗೆ ಈಗಾಗಲೇ ಪರಿಹಾರವನ್ನು ವಿತರಿಸಲಾಗಿದೆ. ಗುಡ್ಡ ಕುಸಿತ ಪ್ರದೇಶಗಳಲ್ಲಿ ನಿರಂತರವಾಗಿ ನಿಗಾ ವಹಿಸಲಾಗಿದ್ದು, ಆ ಪ್ರದೇಶದಲ್ಲಿ ಜನವಸತಿ ಇಲ್ಲದಂತೆ ಎಚ್ಚರವಹಿಸಲಾಗಿದೆ. ಅಪಾಯಕಾರಿ ಮರಗ ತೆರವು ಕಾರ್ಯ ನಡೆಯುತ್ತಿದೆ. ಕಾಳಜಿ ಕೇಂದ್ರಗಳನ್ನು ಗುರುತಿಸಿಟ್ಟುಕೊಂಡಿದ್ದು, ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿಯೊಂದು ಗ್ರಾಮ ಮಟ್ಟದಲ್ಲಿಯೂ ವಿಪತ್ತು ನಿರ್ವಹನೆಗೆ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿರುವಂತೆ ಸೂಚನೆ ನೀಡಿದ್ದು, ಜಿಲ್ಲಾ ತುರ್ತು ಕಾರ್ಯಚರಣಾ ಕೇಂದ್ರದ ಕಂಟ್ರೋಲ್ ರೂಂ ನಲ್ಲಿ ಸ್ವೀಕಾರವಾಗುವ ದೂರುಗಳಿಗೆ ತಕ್ಷಣ ಸ್ಪಂದಿಸಲಾಗುತ್ತಿದೆ ಎಂದರು.
 ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ, ಎಲ್ಲಾ ಉಪ ವಿಭಾಗಾಧಿಕಾರಿಗಳು,ತಹಸೀಲ್ದಾರ್‌ಗಳು, ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top